ಕೇಂದ್ರದ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರ ಹುಟ್ಟುಹಬ್ಬ; ಡಿ.೧೫ರಂದು ಅಭಿನಂದನಾ ಸಮಾರಂಭ
ಮಂಡ್ಯ: ಡಿ.೧೬ರಂದು ಕೇಂದ್ರದ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರ ಹುಟ್ಟುಹಬ್ಬದ ಹಿನ್ನೆಲೆಯಲ್ಲಿ ಡಿ.೧೫ರಂದು ಸಂಜೆ ೫ಕ್ಕೆ ನಗರದ ಸರ್‌ಎಂವಿ ಕ್ರೀಡಾಂಗಣದಲ್ಲಿ ಅಭಿನಂದನಾ ಸಮಾರಂಭ ನಡೆಸಲು ಜಿಲ್ಲಾ ಜೆಡಿಎಸ್ ನಾಯಕರು ನಿರ್ಧರಿಸಿದ್ದಾರೆ.
ನಗರದ ಪ್ರವಾಸಿ ಮಂದಿರದಲ್ಲಿ ಮಾಜಿ ಸಚಿವ ಸಿ.ಎಸ್.ಪುಟ್ಟರಾಜು ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಒಕ್ಕೊರಲ ತೀರ್ಮಾನ ಕೈಗೊಳ್ಳಲಾಯಿತು.
ಮಾಜಿ ಸಚಿವ ಸಿ.ಎಸ್.ಪುಟ್ಟರಾಜು ಮಾತನಾಡಿ, ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರ ಹುಟ್ಟುಹಬ್ಬ ಹಿನ್ನೆಲೆಯಲ್ಲಿ ಡಿ.೧೫ರಂದು ಅಭಿನಂದನಾ ಸಮಾರಂಭ ಏರ್ಪಡಿಸಲಾಗುವುದು ಎಂದರು.
ಸಮಾರAಭದಲ್ಲಿ ಅಂಗವಿಕಲರಿಗೆ ದ್ವಿಚಕ್ರ ವಾಹನಗಳ ವಿತರಣೆ ಮಾಡಲಾಗುವುದು. ಅಲ್ಲದೆ, ಕೇಂದ್ರ ಸರ್ಕಾರದ ವಿವಿಧ ಯೋಜನೆಗಳ ಜಾರಿಗೊಳಿಸುವ ಬಗ್ಗೆ ತಿಳಿಸಲಾಗುವುದು. ಸಮಾರಂಭಕ್ಕೆ ಲೋಕಸಭಾ ಕ್ಷೇತ್ರದ ೮ ವಿಧಾನಸಭಾ ಕ್ಷೇತ್ರಗಳಿಂದ ಲಕ್ಷಾಂತರ ಜನರು ಆಗಮಿಸಲಿದ್ದಾರೆ. ಅದೇ ರಾತ್ರಿ ೧೨ಕ್ಕೆ ಎಚ್.ಡಿ.ಕುಮಾರಸ್ವಾಮಿ ಅವರಿಂದ ಬೃಹತ್ ಕೇಕ್ ಕತ್ತರಿಸಿ ಹುಟ್ಟುಹಬ್ಬ ಆಚರಿಸಲಾಗುವುದು ಎಂದು ತಿಳಿಸಿದರು.
ಸಭೆಯಲ್ಲಿ ಮಾಜಿ ಸಚಿವ ಡಿ.ಸಿ.ತಮ್ಮಣ್ಣ, ಶಾಸಕ ಎಚ್.ಟಿ.ಮಂಜು, ಮಾಜಿ ಶಾಸಕರಾದ ಕೆ.ಅನ್ನದಾನಿ, ಕೆ.ಸುರೇಶ್‌ಗೌಡ, ಜಿಲ್ಲಾಧ್ಯಕ್ಷ ಡಿ.ರಮೇಶ್, ಮುಖಂಡ ಬಿ.ಆರ್.ರಾಮಚಂದ್ರು, ನಗರಸಭೆ ಅಧ್ಯಕ್ಷ ನಾಗೇಶ್, ಮನ್‌ಮುಲ್ ಉಪಾಧ್ಯಕ್ಷ ಎಂ.ಎಸ್.ರಘುನAದನ್, ಸೇರಿದಂತೆ ಮತ್ತಿತರರಿದ್ದರು.
ಕ್ರೀಡಾಂಗಣ ಪರಿಶೀಲನೆ:
ಸಭೆಯ ನಂತರ ಮಾಜಿ ಸಚಿವ ಸಿ.ಎಸ್.ಪುಟ್ಟರಾಜು, ಮಾಜಿ ಶಾಸಕ ಕೆ.ಅನ್ನದಾನಿ,ಜಿಲ್ಲಾಧ್ಯಕ್ಷ ಡಿ.ರಮೇಶ್, ರಘುನಂದನ್ ಸೇರಿದಂತೆ ಮತ್ತಿತರರು ನಗರದ ಸರ್‌ಎಂವಿ ಕ್ರೀಡಾಂಗಣದಲ್ಲಿ ವೇದಿಕೆ ನಿರ್ಮಾಣ ಮಾಡಲು ಸ್ಥಳ ಪರಿಶೀಲನೆ ನಡೆಸಿದರು.






