ಮುತ್ಸದ್ದಿ ರಾಜಕಾರಣಿಯಾಗಿದ್ದ ಕೃಷ್ಣ ಅವರು ಅಜಾತಶತ್ರುಗಳಾಗಿದ್ದರು;ಮುಖ್ಯ ಮಂತ್ರಿ ಸಿದ್ದರಾಮಯ್ಯ
ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಅವರ ಸಾವಿನಿಂದ ಆಘಾತಕ್ಕೀಡಾಗಿದ್ದೇನೆ. ರಾಜ್ಯ ಮತ್ತು ಕೇಂದ್ರ ಸಚಿವರಾಗಿ ಹಾಗೂ ಮುಖ್ಯಮಂತ್ರಿಯಾಗಿ ಕೃಷ್ಣ ಅವರು ಸಲ್ಲಿಸಿರುವ ಸೇವೆ ಅನುಪಮವಾದುದು. ವಿಶೇಷವಾಗಿ ಮುಖ್ಯಮಂತ್ರಿಯಾಗಿ ಐಟಿ-ಬಿಟಿ ಕ್ಷೇತ್ರದ ಬೆಳವಣಿಗೆಗೆ ಅವರು ನೀಡಿರುವ ಕೊಡುಗೆಗಾಗಿ ಕರ್ನಾಟಕ ಸದಾ ಋಣಿಯಾಗಿರುತ್ತದೆ ಎಂದು ಮುಖ್ಯ ಮಂತ್ರಿ ಸಿದ್ದರಾಮಯ್ಯ ತಮ್ಮ ಸಂತಾಪ ವ್ಯಕ್ತಪಡಿಸಿದ್ದಾರೆ.
ಮುತ್ಸದ್ದಿ ರಾಜಕಾರಣಿಯಾಗಿದ್ದ ಕೃಷ್ಣ ಅವರು ಅಜಾತಶತ್ರುಗಳಾಗಿದ್ದರು.
ನಾನು ಕಾಂಗ್ರೆಸ್ ಪಕ್ಷಕ್ಕೆ ಸೇರಿದ ಪ್ರಾರಂಭದ ದಿನಗಳಲ್ಲಿ ನನಗೆ ಮಾರ್ಗದರ್ಶಕರಾಗಿದ್ದ ಕೃಷ್ಣ ಅವರು ಸದಾ ನನ್ನ ಹಿತೈಷಿಗಳಾಗಿದ್ದರು.
ಕೃಷ್ಣ ಅವರ ದೂರದರ್ಶಿತ್ವ, ಶಿಸ್ತುಬದ್ಧ ಜೀವನ, ಸಜ್ಜನಿಕೆಯ ನಡವಳಿಕೆ ಮತ್ತು ಅಧ್ಯಯನಶೀಲ ಪ್ರವೃತ್ತಿ ಉದಯೋನ್ಮುಖ ರಾಜಕಾರಣಿಗಳಿಗೆ ಮಾದರಿಯಾಗಿದೆ.
ಅವರ ಅಗಲಿಕೆಯಿಂದ ನೊಂದಿರುವ ಅವರ ಕುಟುಂಬವರ್ಗ ಮತ್ತು ಅಭಿಮಾನಿಗಳ ದು:ಖದಲ್ಲಿ ನಾನೂ ಭಾಗಿಯಾಗಿದ್ದೇನೆ. ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಭಗವಂತನಲ್ಲಿ ಕೋರುತ್ತೇನೆ.
ಎಸ್.ಎಂ.ಕೃಷ್ಣ ಅವರು, ಮುತ್ಸದ್ದಿ, ದೂರದೃಷ್ಟಿ ಉಳ್ಳವರಾಗಿದ್ದರು. ದೀರ್ಘಕಾಲ ರಾಜಕಾರಣ ಮಾಡಿದ್ದರು.
ನಾನು ವಿದ್ಯಾರ್ಥಿ ಆಗಿದ್ದಾಗ ಎಸ್.ಎಂ.ಕೃಷ್ಣ ಅವರು ಕರೆದಿದ್ದ ಪ್ರಜಾ ಸೋಷಿಯಲಿಸ್ಟ್ ಪಾರ್ಟಿಯ ಸಭೆಯಲ್ಲಿ ಭಾಗವಹಿಸಿದ್ದೆ. ಬಳಿಕ ನಾನು ಲೋಹಿಯಾ ಅವರ ಸಮಾಜವಾದಿ ಪಕ್ಷ ಸೇರ್ಪಡೆಯಾದೆ.
ಎಸ್.ಎಂ.ಕೃಷ್ಣ ಅವರು, 1962 ರಲ್ಲೇ ಸ್ವತಂತ್ರವಾಗಿ ವಿಧಾನಸಭೆಗೆ ಸ್ಪರ್ಧಿಸಿದ್ದರು. ವಿಧಾನಸಭೆ, ವಿಧಾನ ಪರಿಷತ್, ರಾಜ್ಯಸಭೆ, ಲೋಕಸಭೆ ನಾಲ್ಕೂ ಸದನಗಳ ಸದಸ್ಯರೂ ಆಗಿದ್ದು, ರಾಜ್ಯದ ಮುಖ್ಯಮಂತ್ರಿ, ವಿಧಾನಸಭೆ ಸ್ಪೀಕರ್, ಕೇಂದ್ರ ಸಚಿವರು ಹಾಗೂ ರಾಜ್ಯಪಾಲರೂ ಆಗಿದ್ದ ಅಪರೂಪದ ರಾಜಕಾರಣಿ.
ಎಸ್.ಎಂ.ಕೃಷ್ಣ ಅವರು ಮಹಾರಾಷ್ಟ್ರ ರಾಜ್ಯಪಾಲರಾಗಿದ್ದಾಗಲೇ ನಾನು ಕಾಂಗ್ರೆಸ್ ಸೇರಿದ್ದು. ಅವರು ರಾಜ್ಯಪಾಲರಾಗಿದ್ದಾಗ ನಾನು ಅವರನ್ನು ಭೇಟಿಯಾಗಿ, ನಾನು ಕಾಂಗ್ರೆಸ್ ಸೇರುವ ತೀರ್ಮಾನವನ್ನು ಅವರಿಗೆ ತಿಳಿಸಿದೆ. ಅವರು ನನ್ನ ತೀರ್ಮಾನವನ್ನು ಸ್ವಾಗತಿಸಿದ್ದರು.
ಒಳ್ಳೆ ಸಂಸದೀಯ ಪಟು, ಎಲ್ಲರನ್ನೂ ಗೌರವದಿಂದ ಕಾಣುತ್ತಿದ್ದರು. ಯಾವತ್ತೂ ದ್ವೇಷದ ರಾಜಕಾರಣ ಮಾಡಿದವರಲ್ಲ. ಅವರ ಕಾಲದಲ್ಲೇ ಡಾ.ರಾಜ್ ಕುಮಾರ್ ಅವರ ಅಪಹರಣ ಆಗಿ ಆ ಸಂದರ್ಭದ ದೊಡ್ಡ ಸವಾಲನ್ನು ಎದುರಿಸಿದ್ದರು. ಅದನ್ನು ನಿಭಾಯಿಸಿದ್ದರು.
ಬೆಂಗಳೂರನ್ನು ಅಂತಾರಾಷ್ಟ್ರೀಯ ಮಟ್ಟಕ್ಕೆ ಸಿಂಗಾಪುರದಂತೆ ಮಾಡಬೇಕು ಎನ್ನುವ ಉದ್ದೇಶ ಹೊಂದಿದ್ದರು.
ಬೆಂಗಳೂರಿಗೆ ಸಿಲಿಕಾನ್ ವ್ಯಾಲಿ ಆಫ್ ಇಂಡಿಯಾ ಎನ್ನುವ ಹೆಗ್ಗಳಿಕೆ ಬರಲು ಎಸ್.ಎಂ.ಕೃಷ್ಣ ಅವರ ಕೊಡುಗೆ ಅಪಾರ.
ಕಾಂಗ್ರೆಸ್ ಮೂಲಕ ಸುದೀರ್ಘ ರಾಜಕಾರಣ ಮಾಡಿ ಬಿಜೆಪಿ ಸೇರಿ ಒಂದು ವರ್ಷಕ್ಕೆ ರಾಜಕೀಯ ನಿವೃತ್ತಿ ಘೋಷಿಸಿದ ದಕ್ಷ ಆಡಳಿತಗಾರ, ಸಜ್ಜನ-ಮುತ್ಸದ್ದಿ ರಾಜಕಾರಣಿ ಆಗಿದ್ದರು.






