ರಾಜ್ಯ ದಲ್ಲಿ ಹೊಸದಾಗಿ 3988 ಅಂಗನವಾಡಿ ತೆರೆಯಲು ಕೇಂದ್ರಕ್ಕೆ ಪ್ರಸ್ತಾವನೆ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್
ಬೆಳಗಾವಿ ,ಡಿ.13-
ರಾಜ್ಯದಲ್ಲಿ ಹೊಸದಾಗಿ 3988 ಅಂಗನವಾಡಿ ಕೇಂದ್ರಗಳನ್ನು ತೆರೆಯಲು ಕೇಂದ್ರ ಸರ್ಕಾರದ ಅನುಮೋದನೆಗೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಸಚಿವೆ ಲಕ್ಷ್ಮಿ ಆರ್ ಹೆಬ್ಬಾಳ್ಕರ್ ಹೇಳಿದರು.
ಅವರು ಇಂದು ವಿಧಾನ ಪರಿಷತ್ತಿನಲ್ಲಿ ಸದಸ್ಯ ಜವರಾಯಗೌಡ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಉತ್ತರಿಸಿದರು.
ಹೊಸದಾಗಿ ಅಂಗನವಾಡಿ ಕೇಂದ್ರ ಪ್ರಾರಂಭಿಸಲು ಕೇಂದ್ರ ಸರ್ಕಾರದ ಅನುಮೋದನೆ " ಅವಶ್ಯಕವಿರುತ್ತದೆ. ಏಕೆಂದರೆ ಅಂಗನವಾಡಿ ಕೇಂದ್ರದಲ್ಲಿ ಫಲಾನುಭವಿಗಳಿಗೆ ಪೂರೈಸಲಾಗುವ ಪೂರಕ ಪೌಷ್ಟಿಕ ಆಹಾರ ಯೋಜನೆಯಡಿ ಹಂಚಿಕೆ ಅನುದಾನದಲ್ಲಿ ಕೇಂದ್ರದ ಪಾಲು ಶೇ 20ರಷ್ಟು ಇರುತ್ತದೆ.
ಅಂಗನವಾಡಿ ಕಾರ್ಯಕರ್ತೆಯರ ಮತ್ತು ಸಹಾಯಕಿಯರ ಗೌರವಧನ ಪಾವತಿಯಲ್ಲಿ ಆಡಳಿತ ವೆಚ್ಚದಡಿ ಅನುದಾನ ಹಂಚಿಕೆಯಲ್ಲಿ ಕೇಂದ್ರ ಸರ್ಕಾರದ ಪಾಲು ಶೇ 30ರಷ್ಟಿರುತ್ತದೆ.
ಮುಂದುವರೆದು ಸಬ್ಸಿಡಿ ದರದಲ್ಲಿ ಅಕ್ಕಿ ಮತ್ತು ಗೋಧಿಯನ್ನು ಸಹ ಕೇಂದ್ರ ಸರ್ಕಾರವು ರಾಜ್ಯಗಳಿಗೆ ಹಂಚಿಕೆ ಮಾಡುತ್ತದೆ.
ಹಾಲಿ ಕರ್ನಾಟಕ ರಾಜ್ಯದಲ್ಲಿ ಕೇಂದ್ರ ಸರ್ಕಾರದ ಅನುಮೋದಿತ 65931 ಅಂಗನವಾಡಿ ಕೇಂದ್ರಗಳು ಹಾಗೂ ರಾಜ್ಯ ಸರ್ಕಾರದ ವತಿಯಿಂದ ಅನುದಾನಿತ 3988 ಅಂಗನವಾಡಿ ಕೇಂದ್ರಗಳು ಕಾರ್ಯ ನಿರ್ವಹಿಸುತ್ತಿವೆ. ಸದರಿ 3988 ಅಂಗನವಾಡಿ ಕೇಂದ್ರಗಳಿಗೆ ಕೇಂದ್ರ ಸರ್ಕಾರದ ಅನುಮೋದನೆಗಾಗಿ ಪ್ರಸ್ತಾವನೆಯನ್ನು ಸಲ್ಲಿಸಲಾಗಿದೆ ಎಂದರು.
ರಾಜ್ಯದಲ್ಲಿ ಸ್ವಂತ ಕಟ್ಟಡವಿಲ್ಲದ ಅಂಗನವಾಡಿ ಕೇಂದ್ರಗಳಿಗೆ ಹೊಸದಾಗಿ ಕಟ್ಟಡ ನಿರ್ಮಿಸಲು ಕಳೆದ 2 ವರ್ಷಗಳಲ್ಲಿ ರೂ. 22,923 ಲಕ್ಷ ಅನುದಾನ ಬಿಡುಗಡೆಯಾಗಿರುತ್ತದೆ. ಒಟ್ಟು 337 ಅಂಗನವಾಡಿ ಕಟ್ಟಡಗಳ ಕಾಮಗಾರಿ ಪೂರ್ಣಗೊoಡಿದೆ ಎಂದರು.
* ಕೇಂದ್ರದ ಅನುಮೋದನೆ ಸಿಕ್ಕಿದ ತಕ್ಷಣ ಹೊಸ ಅಂಗನವಾಡಿ ಕೇಂದ್ರ
* ವಿಧಾನ ಪರಿಷತ್‌ನಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಉತ್ತರ
ಬೆಳಗಾವಿ: ಕೇಂದ್ರ ಸರ್ಕಾರ ಅನುಮೋದನೆ ದೊರೆತ ತಕ್ಷಣ ಕರ್ನಾಟಕದಲ್ಲಿ ಹೊಸ ಅಂಗನವಾಡಿ ಕೇಂದ್ರಗಳನ್ನು ಆರಂಭಿಸಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.
ಶುಕ್ರವಾರದ ವಿಧಾನಪರಿಷತ್ ಕಲಾಪದಲ್ಲಿ ಪ್ರಶ್ನೋತ್ತರ ವೇಳೆ ಜೆಡಿಎಸ್ ಸದಸ್ಯ ಜವರಾಯಿ ಗೌಡ ಪರವಾಗಿ ತಿಪ್ಪೇಸ್ವಾಮಿ ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವರು, ಕರ್ನಾಟಕದಲ್ಲಿ ಹೊಸ ಅಂಗನವಾಡಿ ಕೇಂದ್ರಗಳ ಸ್ಥಾಪನೆ ಸಂಬಂಧ 2022ರಲ್ಲೇ ಕೇಂದ್ರ ಸರ್ಕಾರದ ಅನುಮೋದನೆಗಾಗಿ ಸಲ್ಲಿಸಲಾಗಿದೆ. ಅನುಮೋದನೆ ದೊರೆತ ತಕ್ಷಣ ಹೊಸ ಅಂಗನವಾಡಿ ಕೇಂದ್ರಗಳನ್ನು ಆರಂಭಿಸಲಾಗುವುದು ಎಂದರು.
ಹಿಂದುಳಿದ ವರ್ಗಗಳ ಮಕ್ಕಳಿಗೆ ಪೌಷ್ಠಿಕ ಆಹಾರ ನೀಡುವುದರ ಜೊತೆಗೆ ಗುಣಮಟ್ಟದ ಶಿಕ್ಷಣ ನೀಡುವುದೇ ಅಂಗನವಾಡಿಯ ಪರಿಕಲ್ಪನೆ. ಇದನ್ನು ಕರ್ನಾಟಕ ಸರ್ಕಾರ ಅಚ್ಚುಕಟ್ಟಾಗಿ ನಿಭಾಯಿಸುತ್ತಿದೆ. ಅಂಗನವಾಡಿ ಕಟ್ಟಡಗಳ ನಿರ್ಮಾಣಕ್ಕೆ ಶೀಘ್ರವೇ ಕ್ರಮವಹಿಸಲಾಗುವುದು ಎಂದು ಸಚಿವರು ಹೇಳಿದರು.
ಹೊಸದಾಗಿ ಅಂಗನವಾಡಿ ಕೇಂದ್ರಗಳನ್ನು ಪ್ರಾರಂಭಿಸಲು ಕೇಂದ್ರ ಸರ್ಕಾರದ ಅನುಮೋದನೆ ಅವಶ್ಯಕತೆವಿರುತ್ತದೆ. ಈ ಸಂಬಂಧ ನಾನು ಈಗಾಗಲೇ ಕೇಂದ್ರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಅನ್ನಪೂರ್ಣ ದೇವಿ ಅವರನ್ನು 3 ಬಾರಿ ಭೇಟಿಯಾಗಿ ಮನವಿ ಸಲ್ಲಿಸಿರುವೆ ಎಂದರು.
ಶಾಲಾ ಆವರಣದಲ್ಲಿ ನಿವೇಶನ ಕೋರಿ ಈಗಾಗಲೇ ಕ್ಷೇತ್ರದ ಶಿಕ್ಷಣಾಧಿಕಾರಿಗಳಿಗೆ ಪತ್ರ ಬರೆಯಲಾಗಿದ್ದು, ಪ್ರಸ್ತುತ ಶಾಲಾ ಕೊಠಡಿಗಳಲ್ಲಿ ಯಾವುದೇ ತೊಂದರೆಯಿಲ್ಲದೆ ಅಂಗನವಾಡಿ ಕೇಂದ್ರಗಳನ್ನು ನಡೆಸಲಾಗುತ್ತಿದೆ. ರಾಜ್ಯದಲ್ಲಿ ಸ್ವಂತ ಕಟ್ಟಡವಿಲ್ಲದ ಅಂಗನವಾಡಿ ಕೇಂದ್ರಗಳಿಗೆ ಹೊಸದಾಗಿ ಕಟ್ಟಡ ನಿರ್ಮಿಸಲು ಕಳೆದ 2 ವರ್ಷಗಳಲ್ಲಿ 22.92 ಕೋಟಿ ಬಿಡುಗಡೆಯಾಗಿರುತ್ತದೆ. ಈಗಾಗಲೇ 337 ಅಂಗನವಾಡಿ ಕಟ್ಟಡಗಳ ಕಾಮಗಾಗಿ ಪೂರ್ಣಗೊಂಡಿದೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಮಾಹಿತಿ ನೀಡಿದರು.






