ಮಾರ್ಚ್ 1-8 ರವರೆಗೆ 16 ನೇ ಬೆಂಗಳೂರು ಅಂತರರಾಷ್ಟ್ರೀಯ ಚಲನಚಿತ್ರೋತ್ಸವ ಚಿತ್ರೋತ್ಸವದ ಥೀಮ್: ಸರ್ವ ಜನಾಂಗದ ಶಾಂತಿಯ ತೋಟ ---------------------- ಫೆಬ್ರವರಿ 10ರ ಒಳಗಾಗಿ ನಿಗದಿತ ಅವಧಿಯಲ್ಲಿ ಖಾತಾ ನೀಡುವ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು: ಸಿ.ಎಂ.ಸೂಚನೆ
ಬೆಂಗಳೂರು, ಜನವರಿ 6: ಈ ಬಾರಿ ಸರ್ವ ಜನಾಂಗದ ಶಾಂತಿಯ ತೋಟ ಎಂಬ ವಿಷಯವನ್ನು ಆಧರಿಸಿ 16 ನೇ ಅಂತರರಾಷ್ಟ್ರೀಯ ಚಲನಚಿತ್ರೋತ್ಸವನ್ನು ಮಾರ್ಚ್ 1-8 ರವರೆಗೆ ಆಯೋಜಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಅವರು ಇಂದು ಗೃಹ ಕಚೇರಿ ಕೃಷ್ಣಾದಲ್ಲಿ ಅಂತರರಾಷ್ಟ್ರೀಯ ಚಲನಚಿತ್ರೋತ್ಸವದ ಸಂಘಟನಾ ಸಮಿತಿ ಸಭೆಯ ನಂತರ ಕರೆಯಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡುತ್ತಿದ್ದರು.
ಸಿನಿಮಾಸಕ್ತರಿಗೆ ಸುವರ್ಣಾವಕಾಶ
ಕಳೆದ ವರ್ಷ ಚಲನಚಿತ್ರೋತ್ಸವಕ್ಕೆ ಸಾಮಾಜಿಕ ನ್ಯಾಯ ಎಂಬ ಥೀಮ್ ಆಧರಿಸಿ ಚಲನಚಿತ್ರೋತ್ಸವವನ್ನು ಆಯೋಜಿಸಲಾಗಿತ್ತು . ಈ ಬಾರಿಯೂ 60 ಕ್ಕೂ ಹೆಚ್ಚು ದೇಶಗಳ ಚಲನಚಿತ್ರಗಳು ಅಂತರರಾಷ್ಟ್ರೀಯ ಚಲನಚಿತ್ರೋತ್ಸದಲ್ಲಿ ಪಾಲ್ಗೊಳ್ಳಲಿದ್ದು, 200 ಚಲನಚಿತ್ರಗಳು 13 ಪರದೆಗಳಲ್ಲಿ ಪ್ರದರ್ಶನಗೊಳ್ಳಲಿವೆ. ಒರಾಯ್ ಮಾಲ್ ನಲ್ಲಿ 11 ಪರದೆಗಳು, ಸುಚಿತ್ರಾ ಫಿಲಂ ಸೊಸೈಟಿ ಹಾಗೂ ಡಾ: ಅಂಬರೀಶ್ ಆಡಿಟೋರಿಯಂ, ಚಾಮರಾಜಪೇಟೆ ಇಲ್ಲಿ ತಲಾ ಒಂದು ಪರದೆಯಲ್ಲಿ ಚಿತ್ರ ಪ್ರದರ್ಶನಗೊಳ್ಳಲಿವೆ. ಕನ್ನಡ ಸೇರಿದಂತೆ ಇತರೆ ಭಾಷೆಗಳ 400 ಚಿತ್ರ ಪ್ರದರ್ಶನಗಳು ನಡೆಯಲಿದ್ದು ಬೆಂಗಳೂರು ನಾಗರಿಕರಿಗೆ ಹಾಗೂ ರಾಜ್ಯದ ಎಲ್ಲರಿಗೂ ವಿವಿಧ ದೇಶಗಳ ನಾಗರಿಕತೆಯನ್ನು ಕಾಣಲು ಅವಕಾಶ ಲಭಿಸಲಿದೆ. ಸಿನಿಮಾಸಕ್ತರಿಗೆ ಇದೊಂದು ಸುವರ್ಣಾವಕಾಶ ಎಂದು ಮುಖ್ಯಮಂತ್ರಿಗಳು ತಿಳಿಸಿದರು.
9 ಕೋಟಿ ರೂ.ಗಳ ವೆಚ್ಚ
2006 ರಿಂದ ಪ್ರಾರಂಭವಾದ ಚಲನಚಿತ್ರೋತ್ಸವ ಇದೀಗ 16 ನೇ ಅಂತರರಾಷ್ಟ್ರೀಯ ಚಲನಚಿತ್ರೋತ್ಸವ. ಕಳೆದ ವರ್ಷ 7 ಕೋಟಿ ರೂ. ವೆಚ್ಚವಾಗಿತ್ತು. ಈ ವರ್ಷ 9 ಕೋಟಿ ರೂ.ಗಳ ವೆಚ್ಚದಲ್ಲಿ ಚಲನಚಿತ್ರೋಸವ ನಡೆಸಲು ಸಮಿತಿ ತೀರ್ಮಾನಿಸಿದೆ ಎಂದರು.
1 ರಂದು ಉದ್ಘಾಟನೆ, 8 ರಂದು ಸಮಾರೋಪ ಸಮಾರಂಭ ಜರುಗಲಿದೆ. ಸಮಿತಿಯು ಸಿನಿಮೋತ್ಸವದ ರಾಯಭಾರಿಯನ್ನು ತೀರ್ಮಾನಿಸಲಿದೆ. ಸಮಾರಂಭವನ್ನು ಮುಖ್ಯಮಂತ್ರಿಗಳು ಉದ್ಘಾಟಿಸಲಿದ್ದು, ಸಮಾರೋಪ ಸಮಾರಂಭದಲ್ಲಿ ರಾಜ್ಯಪಾಲರು ಪಾಲ್ಗೊಳ್ಳವರು.
ಬಜೆಟ್ ಪೂರ್ವಭಾವಿ ಚರ್ಚೆಗಳಿರುವುದರಿಂದ ಮಾರ್ಚ್ 1 ರಿಂದ ಚಲನಚಿತ್ರೋತ್ಸವವನ್ನು ಆಯೋಜಿಸಲಾಗುತ್ತಿದೆ ಎಂದು ಮುಖ್ಯಮಂತ್ರಿಗಳು ಈ ಸಂದರ್ಭದಲ್ಲಿ ತಿಳಿಸಿದರು.
ಚಲನಚಿತ್ರಮಂದಿಗಳು ಮುಚ್ಚುವ ಪರಿಸ್ಥಿತಿಯಲ್ಲಿರುವಾಗ, ಚಿತ್ರರಂಗಕ್ಕೆ ಸರ್ಕಾರದ ಬೆಂಬಲದ ಕ್ರಮಗಳ ಬಗ್ಗೆ ಪ್ರತಿಕ್ರಿಯೆ ನೀಡಿ, ಇದು 16 ನೇ ಅಂತರರಾಷ್ಟ್ರೀಯ ಸಿನಿಮೋತ್ಸವ. ಈ ಬಾರಿಯ ಸರ್ವ ಜನಾಂಗದ ಶಾಂತಿಯ ತೋಟ ಎಂಬ ವಿಷಯಾಧಾರಿತವಾದ ಚಲನಚಿತ್ರೋತ್ಸವವನ್ನು ಈ ಬಾರಿ ಏರ್ಪಡಿಸಲಾಗುವುದು. ಕನ್ನಡ ಚಲನಚಿತ್ರಗಳ ಉತ್ತೇಜನ ನೀಡುವಂತಹ ಹಲವು ಯೋಜನೆಗಳನ್ನು ಸರ್ಕಾರ ಜಾರಿಗೊಳಿಸುತ್ತಾ ಬಂದಿದೆ. ಕನ್ನಡ ಚಲನಚಿತ್ರಗಳ ಸಹಾಯಧನಕ್ಕಾಗಿ ಆಯ್ಕೆ ಸಮಿತಿಯನ್ನು ರಚಿಸಲಾಗಿದ್ದು, ಸಮಿತಿ ಚಿತ್ರಗಳನ್ನು ವೀಕ್ಷಿಸುತ್ತಿದೆ. ಎಂದರು.
ಮೈಸೂರಿನಲ್ಲಿ ಚಿತ್ರನಗರಿ
ಮೈಸೂರಿನಲ್ಲಿ ಚಿತ್ರನಗರಿ ನಿರ್ಮಿಸಲು ಸರ್ಕಾರ ಈಗಾಗಲೇ 110 ಎಕರೆ ವಿಸ್ತೀರ್ಣದ ಜಮೀನನ್ನು ಮಂಜೂರು ಮಾಡಿದ್ದು, ಪಿಪಿಪಿ ಮಾದರಿಯಲ್ಲಿ ಚಿತ್ರನಗರಿಯನ್ನು ನಿರ್ಮಾಣದ ಯೋಜನೆ ಅನುಷ್ಠಾನಗೊಳಿಸಲಾಗುವುದು ಎಂದರು.
ಸದಭಿರುಚಿಯ ಚಿತ್ರಗಳನ್ನು ವೀಕ್ಷಿಸುವೆ
ಈ ಬಾರಿಯ ಚಲನಚಿತ್ರೋತ್ಸವದಲ್ಲಿ ಮುಖ್ಯಮಂತ್ರಿಗಳು ಚಲನಚಿತ್ರಗಳನ್ನು ವೀಕ್ಷಿಸುವರೇ ಎಂಬ ಪ್ರಶ್ನೆಗೆ ಉತ್ತರಿಸಿದ ಮುಖ್ಯಮಂತ್ರಿಗಳು , ಸಮಯಾವಕಾಶವಾದರೆ, ಸದಭಿರುಚಿಯ ಚಲನಚಿತ್ರಗಳನ್ನು ವೀಕ್ಷಿಸಲು ಪ್ರಯತ್ನಿಸುತ್ತೇನೆ ಎಂದರು.
ಎಂಎಲ್ ಸಿ ನಾಮನಿರ್ದೇಶನ
ವಿಧಾನಪರಿಷತ್ ಸದಸ್ಯರ ನಾಮನಿರ್ದೇಶನದ ಬಗ್ಗೆ ಕೇಳಲಾದ ಪ್ರಶ್ನೆಗೆ ಉತ್ತರಿಸಿ, ಈ ಬಗ್ಗೆ ಪಕ್ಷದ ವರಿಷ್ಠರು ನಿರ್ಧಾರವನ್ನು ಕೈಗೊಳ್ಳಲಿದ್ದು, ಸಿನಿಮಾ , ಸಾಹಿತ್ಯ, ಸಾಮಾಜಿಕ ಕ್ಷೇತ್ರಗಳೂ ಸೇರಿದಂತೆ ವಿವಿಧ ಕ್ಷೇತ್ರಗಳಿಂದ ಅಭ್ಯರ್ಥಿಯನ್ನು ಪರಿಗಣಿಸಲಾಗುವುದು ಎಂದರು.
ಭೋಜನಕೂಟದಲ್ಲಿ ರಾಜಕೀಯ ಚರ್ಚೆಯಾಗಲಿಲ್ಲ
ಸಚಿವ ಸತೀಶ್ ಜಾರಕಿಹೊಳಿಯವರ ಆಹ್ವಾನದ ಮೇರೆಗೆ ಭೋಜನಕೂಟದಲ್ಲಿ ಭಾಗಹಿಸಲಾಗಿತ್ತು. ರಾಜಕೀಯ ವಿಚಾರಗಳು ಚರ್ಚಿಯಾಗಿಲ್ಲ. ಪಕ್ಷವನ್ನು ಗಟ್ಟಿಗೊಳಿಸಲು ತೆಗೆದುಕೊಳ್ಳಬೇಕಾದ ಕ್ರಮಗಳ ಬಗ್ಗೆ ಚರ್ಚಿಸಲಾಯಿತು. ಮಾಧ್ಯಮಗಳಲ್ಲಿ ಊಹಾಪೋಹದ ವರದಿಗಳು ಬಂದಿವೆ. ಹೊಸ ವರ್ಷದ ಪ್ರಯುಕ್ತ ಭೋಜನಕೂಟ ಏರ್ಪಡಿಸಲಾಗಿತ್ತು ಎಂದರು
0000000000
ಫೆಬ್ರವರಿ 10ರ ಒಳಗಾಗಿ ನಿಗದಿತ ಅವಧಿಯಲ್ಲಿ ಖಾತಾ ನೀಡುವ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು: ಸಿ.ಎಂ.ಸೂಚನೆ
ಹಲವು ವರ್ಷಗಳಿಂದ ಸಾರ್ವಜನಿಕರಿಗೆ ಆಗುತ್ತಿರುವ ಕಿರಿಕಿರಿ, ಭ್ರಷ್ಟಾಚಾರಕ್ಕೆ ಸಂಪೂರ್ಣ ಕಡಿವಾಣ ಹಾಕಬೇಕು. ಇದಕ್ಕೆ ಪರಸ್ಪರ ಹೊಂದಾಣಿಕೆಯಿಂದ ಮೂರೂ ಇಲಾಖೆಗಳು ಕಾರ್ಯ ನಿರ್ವಹಿಸಿ: ಸಿ.ಎಂ.ಸ್ಪಷ್ಟ ಸೂಚನೆ
ನಿಯಮ ಪಾಲಿಸದ, ರೆವಿನ್ಯೂ ಬಡಾವಣೆಗಳಿಗೆ ಬ್ರೇಕ್ ಹಾಕುವ ಅತ್ಯಗತ್ಯವಿದೆ: ಸಭೆಯಲ್ಲಿ ನಿರ್ಣಯ
ಒಂದೇ ಸೈಟನ್ನು ಹಲವರಿಗೆ ಮಾರುವ ವಂಚನೆಗೆ ಸಂಪೂರ್ಣ ಬ್ರೇಕ್ ಹಾಕಲೇಬೇಕು: ಸಿ.ಎಂ ಕಡಕ್ ಸೂಚನೆ
ನಕಲಿ ದಾಖಲೆಗಳ ಪರಿಶೀಲಿಸದೆ ಆಸ್ತಿ ನೋಂದಣಿ: ಸಿ.ಎಂ.ಆಕ್ರೋಶ
ಕೆಲವು ಅಧಿಕಾರಿಗಳೂ ಇದರ ಪರವಾಗಿದ್ದಾರೆ. ಇದೆಲ್ಲಕ್ಕೂ ಕಡಿವಾಣ ಅಗತ್ಯ: ಸಿ.ಎಂ*
ನೋಂದಣಿ ಮತ್ತು ಮುದ್ರಾಂಕ ಇಲಾಖೆಗೆ ಸಂಬಂಧಿಸಿದ ವಿಷಯಗಳ ಕುರಿತು ಮುಖ್ಯಮಂತ್ರಿ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯ ಇತರೆ ಮುಖ್ಯಾಂಶಗಳು ಹಾಗೂ ಮುಖ್ಯಮಂತ್ರಿ ಅವರು ನೀಡಿದ ಸೂಚನೆಗಳು:
• ಬಿಬಿಎಂಪಿಯಲ್ಲಿ ಸುಮಾರು 15 ಲಕ್ಷ ಆಸ್ತಿಗಳು ಖಾತಾ ದಾಖಲೆಗಳನ್ನು ಹೊಂದಿರುವುದಿಲ್ಲ. ಇದರಿಂದ ತೆರಿಗೆಯೂ ಕಟ್ಟದ ಕಾರಣ ಸಾವಿರಾರು ಕೋಟಿ ರೂ. ತೆರಿಗೆ ಪ್ರತೀ ವರ್ಷ ಸರ್ಕಾರಕ್ಕೆ ನಷ್ಟ ಉಂಟಾಗುತ್ತಿದೆ.
• ಸ್ಥಳೀಯ ಸಂಸ್ಥೆಗಳಲ್ಲಿ ಅಂದಾಜು 30 ಲಕ್ಷ ಆಸ್ತಿಗಳಿಗೆ ಖಾತೆಗಳು ಇರುವುದಿಲ್ಲ,
• ಗ್ರಾಮ ಪಂಚಾಯತ್‌ಗಳಲ್ಲಿ ಅಂದಾಜು 90 ಲಕ್ಷ ಆಸ್ತಿಗಳು ಖಾತಾ ದಾಖಲೆಗಳನ್ನು ಹೊಂದಿರುವುದಿಲ್ಲ.
• ಖಾತೆಯಿಲ್ಲದೆ, ಖೊಟ್ಟಿ ದಾಖಲೆಗಳನ್ನು ಸೃಷ್ಟಿಸಿ ನೋಂದಣಿ ಮಾಡುವ ಪ್ರಕ್ರಿಯೆಗೆ ಕಡಿವಾಣ ಹಾಕಬೇಕು. ಇದು ಸ್ಥಳೀಯ ಸಂಸ್ಥೆಗಳು ಮತ್ತು ನೋಂದಣಿ ಇಲಾಖೆ ಸಮನ್ವಯದಿಂದ ಕಾರ್ಯನಿರ್ವಹಿಸಬೇಕು.
• ಸ್ಥಳೀಯ ಸಂಸ್ಥೆಗಳು ಖಾತಾ ನೀಡಿರುವ ಆಸ್ತಿಗಳನ್ನು ಮಾತ್ರ ನೋಂದಣಿ ಇಲಾಖೆಯಡಿ ನೋಂದಣಿ ಮಾಡಬೇಕು. ಸ್ಥಳೀಯ ಸಂಸ್ಥೆಗಳು ನೀಡಿರುವ ಖಾತಾ ದಾಖಲೆಗಳ ಡಾಟಾಬೇಸ್ ಕಂಪ್ಯೂಟರ್‌ನಲ್ಲಿ ಇರಬೇಕು. ಈ ಡಾಟಾ ಬೇಸ್ ಆಧರಿಸಿ ನೋಂದಣಿ ಪ್ರಕ್ರಿಯೆ ಮಾಡಬೇಕು.
• ನೋಂದಣಿ ಪ್ರಕ್ರಿಯೆ ಇಂಟಿಗ್ರೇಷನ್ ಆದ ಮೇಲೆ ಅಕ್ರಮಗಳ ಮೇಲೆ ಕಡಿವಾಣ ಸಾಧ್ಯವಾಗಿದೆ. ಬಿಬಿಎಂಪಿ ವ್ಯಾಪ್ತಿಯಲ್ಲಿ ಒನ್ ಟೈಮ್ ಪರಿಹಾರ ನೀಡುವ ಬಗ್ಗೆ ಮುಂದಿನ ಸಚಿವ ಸಂಪುಟದಲ್ಲಿ ನಿರ್ಧಾರ ಕೈಗೊಳ್ಳಲಾಗುವುದು.
• ಬಿಬಿಎಂಪಿಯಲ್ಲಿ ವ್ಯಾಪ್ತಿಯಲ್ಲಿ ಖಾತಾ ನೀಡಿರುವುದನ್ನು ಡಾಟಾ ಬೇಸ್‌ನಲ್ಲಿ ಹಾಕಬೇಕು. ಇದರಿಂದ ಖಾತೆ ಆದ ಆಸ್ತಿಗಳನ್ನು ಮಾತ್ರ ನೋಂದಣಿ ಮಾಡಬಹುದು. ಕಾಗದ ದಾಖಲೆಗಳ ಆಧಾರದಲ್ಲಿ ಯಾವುದೇ ಕಾರಣಕ್ಕೂ ನೋಂದಣಿಗೆ ಪರಿಗಣಿಸಬಾರದು.
• ಬಿಬಿಎಂಪಿ, ಸ್ಥಳೀಯ ಸಂಸ್ಥೆಗಳು ಮತ್ತು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಅಭಿಯಾನದ ಮಾದರಿಯಲ್ಲಿ ಖಾತಾ ನೀಡುವ ಪ್ರಕ್ರಿಯೆಯನ್ನು ನಡೆಸಲು ಸೂಚನೆ. ಫೆಬ್ರವರಿ 10ರ ಒಳಗಾಗಿ ನಿಗದಿತ ಅವಧಿಯಲ್ಲಿ ಖಾತಾ ನೀಡುವ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು.
• ಬಿಬಿಎಂಪಿ ವ್ಯಾಪ್ತಿಯಲ್ಲಿ 23 ಲಕ್ಷ ಆಸ್ತಿಗಳ ಡಿಜಿಟೈಸ್ ಮಾಡಲಾಗಿದೆ. ಈಗಾಗಲೇ 15 ಲಕ್ಷ ಖಾತೆಗಳನ್ನು ಡೌನ್‌ಲೋಡ್ ಮಾಡಲಾಗಿದೆ.
• ಉಪ ನೋಂದಣಾಧಿಕಾರಿ ಕಚೇರಿಗಳಲ್ಲಿ ಕ್ರಮಬದ್ಧವಲ್ಲದ ಸ್ವತ್ತುಗಳ ನಕಲಿ ಖಾತೆಗಳನ್ನು ಸೃಜಿಸಿ ವಂಚನೆಯಿಂದ ಹೆಚ್ಚು ದಸ್ತಾವೇಜುಗಳ ನೋಂದಣಿ ಮಾಡುವ ಪ್ರಕ್ರಿಯೆಗೆ ಸಂಪೂರ್ಣ ಕಡಿವಾಣ ಹಾಕಬೇಕು.
• ಇನ್ನು ಮುಂದೆ ಕಂದಾಯ ಜಮೀನಿನಲ್ಲಿ ಲೇಔಟ್ ನಿರ್ಮಾಣಕ್ಕೆ ಅವಕಾಶ ನೀಡಬಾರದು. ಇದನ್ನು ತಡೆಯಲು ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳಬೇಕು. ಈಗಾಗಲೇ ಇರುವ ಅಂತಹ ಲೇಔಟ್‌ಗಳ ಕುರಿತು ಸೂಕ್ತ ಕ್ರಮ ಕೈಗೊಳ್ಳಬೇಕು.
• ನಿವೇಶನಗಳಲ್ಲಿರುವ ರಸ್ತೆಗಳನ್ನು ಸಾರ್ವಜನಿಕ ರಸ್ತೆಗಳಾಗಿ ಪರಿಗಣಿಸುವ ಕುರಿತು ಕ್ರಮ ಪರಿಶೀಲಿಸಬೇಕು.
• ನಗರ ಪ್ರದೇಶಗಳಲ್ಲಿ ಆಸ್ತಿಗಳ ಅಕ್ರಮ ನೋಂದಣಿ ತಡೆಗಟ್ಟಲು ಹಾಗೂ ಆಸ್ತಿ ನೋಂದಣಿ ಮತ್ತು ಖಾತಾ ನಮೂದನ್ನು ಇನ್ನಷ್ಟು ಸರಳೀಕರಣಗೊಳಿಸಲು ಕಾವೇರಿ ಮತ್ತು ಇ-ಆಸ್ತಿ ತಂತ್ರಾಂಶಗಳ ಸಂಯೋಜನೆಯನ್ನು ಕಡ್ಡಾಯಗೊಳಿಸಲಾಗಿದೆ.
• ಈ ವರ್ಷ ಡಿಸೆಂಬರ್ ಕೊನೆಗೆ ರೂ.16,993 ಕೋಟಿ ರಾಜಸ್ವ ಸಂಗ್ರಹಿಸಲಾಗಿದೆ. ಕಳೆದ ವರ್ಷಕ್ಕೆ ಹೋಲಿಸಿದರೆ ಶೇ.17ರಷ್ಟು ಹೆಚ್ಚುವರಿ ಪ್ರಗತಿ ಸಾಧಿಸಲಾಗಿದೆ.
• ಕಂದಾಯ ಇಲಾಖೆಯಲ್ಲಿ ಸರ್ವೇ ನಂಬರ್‌ಗಳಲ್ಲಿ ನಿರ್ಮಿಸಿದ ಅನಧಿಕೃತ ಬಡಾವಣೆಗಳು/ನಿವೇಶನಗಳ ದತ್ತಾಂಶ ಮಾಹಿತಿ ಇದ್ದು, ಸದರಿ ಮಾಹಿತಿಯನ್ನು ಆಧರಿಸಿ ಒಂದೇ ಯೋಜನೆಯಲ್ಲಿ ಸದರಿ ಸ್ವತ್ತುಗಳಿಗೆ ಖಾತಾ ದಾಖಲೆಗಳನ್ನು ನೀಡುವ ಪ್ರಕ್ರಿಯೆಗೆ ಚಾಲನೆ ನೀಡಬೇಕು.
• ಗ್ರಾಮ ಪಂಚಾಯತ್‌ಗಳಲ್ಲಿ 44 ಲಕ್ಷ ಆಸ್ತಿಗಳಿಗೆ ಮಾತ್ರ ಖಾತೆಯಿದೆ. ಇದರಿಂದ 800 ಕೋಟಿ ರೂ. ಆದಾಯ ಪ್ರತಿ ವರ್ಷ ಬರುತ್ತಿದೆ. ಆದರೆ ಸುಮಾರು 96 ಲಕ್ಷ ಆಸ್ತಿಗಳಿಗೆ ಇನ್ನೂ ಈ ಖಾತಾ ಇರುವುದಿಲ್ಲ. ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಖಾತೆ ನೋಂದಣಿ ಪ್ರಕ್ರಿಯೆಯನ್ನು ಸರಳಗೊಳಿಸುವ ಕುರಿತು ಕ್ರಮ.




